ನೀನೊಲಿದರೆ ಕೊರಡು ಕೊನರುವುದಯ್ಯ
ರಚನೆ: ಬಸವಣ್ಣ
ನೀನೊಲಿದರೆ ಕೊರಡು ಕೊನರುವುದಯ್ಯ
ನೀನೊಲಿದರೆ ಬರಡು ಹಯನಹುದಯ್ಯ
ನೀನೊಲಿದರೆ ವಿಷವಮೃತವಹುದಯ್ಯ
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ
ನೀರಿಂಗೆ ನೈದಿಲೆಯೇ ಶೃಂಗಾರ
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗಮನ ಶರಣರಿಗೆ
ನೊಸಲ ವಿಭೂತಿಯೇ ಶೃಂಗಾರ
ಹುತ್ತವ ಬಡಿದರೆ ಉರಗ ಸಾವುದೆ
ಘೋರತಪವ ಮಾಡಿದರೇನು
ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ
ಕೂಡಲಸಂಗಮದೇವ?
ಲೋಕದ ಡೊಂಕ ನೀವೇಕೆ ತಿದ್ದುವಿರಿ?
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದು:ಖಕ್ಕೆ ಅಳುವರ ಮೆಚ್ಚ
ನಮ್ಮ ಕೂಡಲಸಂಗಮದೇವ
ಹಾವು ತಿಂದವರ ನುಡಿಸಬಹುದು
ಗರ ಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಬಾರದು ನೋಡಯ್ಯ
ಬಡತನವೆಂಬ ಮಂತ್ರವಾದಿ ಹೋಗಲು
ಒಡನೆ ನುಡಿವರಯ್ಯ ಕೂಡಲಸಂಗಮದೇವ
ಕಳಬೇಡ ಕೊಲಬೇಡ
ಹುಸಿಯ ನುಡಿಯಲು ಬೇಡ
ಮುನಿಯ ಬೇಡ
ಅನ್ಯರಿಗೆ ಅಸಹ್ಯಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲು ಬೇಡ
ಇದೇ ಅಂತರಂಗಶುದ್ಧಿ
ಇದೇ ಬಹಿರಂಗಶುದ್ಧಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
ಮಾಡುವಂತಿರಬೇಕು, ಮಾಡದಂತಿರಬೇಕು!
ಮಾಡುವ ಮಾಟದೊಳಗೆ ತಾನಿಲ್ಲದಿರಬೇಕು!!
ನೋಡುವಂತಿರಬೇಕು, ನೋಡದಂತಿರಬೇಕು!
ನೋಡುವ ನೋಟದೊಳಗೆ ತಾನಿಲ್ಲದಿರಬೇಕು!!
ನಮ್ಮ ಕೂಡಲಸಂಗಮದೇವರ
ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು!
ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ.
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ,
ಕೂಡಿಕೊಂಬುವ ನಮ್ಮ ಕೂಡಲಸಂಗಮದೇವ
ಕಲ್ಲನಾಗರ ಕಂಡರೆ ಹಾಲನೆರೆ ಎಂಬರು;
ದಿಟನಾಗರ ಕಂಡರೆ ಕೊಲ್ಲು ಕೊಲ್ಲು ಎಂಬರಯ್ಯ!
ಉಂಬ ಜಂಗಮ ಬಂದರೆ ನಡೆ ಎಂಬರು;
ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ!
ನಮ್ಮ ಕೂಡಲಸಂಗನ ಶರಣರ ಕಂಡು
ಉದಾಸೀನವ ಮಾಡಿದರೆ,
ಕಲ್ಲತಾಗಿದ ಮಿಟ್ಟೆಯಂತಪ್ಪರಯ್ಯ!