ಇಷ್ಟಲಿಂಗದ ಕೂಟ
ಪ್ರಾಣಲಿಂಗದ ಸಂಗ
ಭಾವಲಿಂಗದ ಸಮರಸವ ಬಲ್ಲವರಾರೊ ಅವರನೆನ್ನ ಸದ್ಗುರು ಅನುಮಿಷೇಶ್ವರನೆಂಬೆ. ಆ ನಿಜಶಿವಯೋಗವ ಮರೆಯದವರಿಗೆ ಅಣಿಮಾದಿ ಅಷ್ಟೈಶ್ವರ್ಯದೊಡನೆ ಕೂಡಿದ ಸಕಲ ಲಕ್ಷಣ ಸಂಪನ್ನರು ಸರಿಯಲ್ಲ. 66 ಸಿದ್ಧಿಗಳೊಡನೆ ಕೂಡಿದ ಸಿದ್ಧ ಪುರುಷರೂ ಸರಿಯಲ್ಲ. ಲಾವಣ್ಯದೊಡನೆ ಕೂಡಿದ ಜಯಂತ ಮನ್ಮಥ ವಸಂತರೂ ಸರಿಯಲ್ಲ. ಕಲ್ಪವೃಕ್ಷ ಕಾಮಧೇನು ಚಿಂತಾಮಣಿ ಭದ್ರಪೀಠ ಮೊದಲಾದ ಮಹದೈಶ್ವರ್ಯವುಳ್ಳ ದೇವೇಂದ್ರನೂ ಸರಿಯಲ್ಲ. ದೇವೇಂದ್ರನ ಮೇಲೆ ಕೋಟ್ಯನುಕೋಟಿ ಮೊದಲಾದ ಹರಿ ವಿರಿಂಚ್ಯಾದಿಗಳ ಸಂಪದವೂ ಸರಿಯಲ್ಲ. ಶ್ರುತಿ ವಿದ್ಯದೊಡನೆ ಕೂಡಿದ ವ್ಯಾಸ ದಕ್ಷಾದಿಗಳೂ ಸರಿಯಲ್ಲ. ಸಪ್ತಕೋಟಿ ಮಹಾಮಂತ್ರಂಗಳ ಬಲ್ಲಂತಹ ಮಹಾಮುನಿಗಳೂ ಸರಿಯಲ್ಲ. ಮಹಾರಾಜಯೋಗದೊಡನೆ ಕೂಡಿದ ಮನುಮಾಂಧಾತರೂ ಸರಿಯಲ್ಲ. ಮಹಾಲಿಂಗದೊಡನೆ ಕೂಡಿದ ಶಾಂಭವಯೋಗಕ್ಕೆ ಆವಾವ ಪದವೂ ಸರಿಯಲ್ಲ. ಈ ಶಾಂಭವಯೋಗವಾರಲ್ಲಿ ಸ್ಥಾವರವಾಗಿದ್ದಿತ್ತು
ಅವರಲ್ಲಿ ಸರ್ವಲಕ್ಷಣಂಗಳು
ಸರ್ವ ವಿಚಿತ್ರಂಗಳು
ಸರ್ವ ಸುಖಂಗಳು ಸರ್ವ ಭಕ್ಷ್ಯಂಗಳು
ಸರ್ವೈಶ್ವರ್ಯಂಗಳು ಸರ್ವ ಪದಂಗಳು ಸರ್ವ ಸಿದ್ಧಿಗಳು ಸರ್ವ ಕ್ರಮಂಗಳು ಸರ್ವ ಕರ್ತೃತ್ವಮುಂಟು. ಪ್ರಕೃತಿಯೋಗವಂ ಮಾಡುವ ನರಸುರಾಸುರರು ಮೂಲಪ್ರಕೃತಿಯೋಗವ ಮಾಡುವ ಮನು ಮಾಂಧಾತರು ತೃಣ ಮಾತ್ರವು. ನಿತ್ಯನಿಜಶಿವಸ್ವರೂಪವಾದ ಶಾಂಭವ ಯೋಗಿಗಳಿಗೆ ಸರ್ವಯೋಗಂಗಳು ತೃಣಮಾತ್ರವು_ಗುಹೇಶ್ವರಲಿಂಗವನರಿದರಾಗಿ.