ಕಲ್ಯಾಣವೆಂಬ ಪ್ರಣತೆಯಲ್ಲಿ ಭಕ್ತಿರಸವೆಂಬ ತೈಲವನೆರೆದು
ಆಚಾರವೆಂಬ ಬತ್ತಿಯಲ್ಲಿ ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು ತೊಳಗಿ ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶ ! ಆ ಬೆಳಗಿನೊಳಗೆ ಒಪ್ಪುತ್ತಿದ್ದರಯ್ಯಾ ಅಸಂಖ್ಯಾತ ಭಕ್ತಗಣಂಗಳು. ಶಿವಭಕ್ತರಿರ್ದ ಕ್ಷೇತ್ರವೆ ಅವಿಮುಕ್ತಕ್ಷೇತ್ರವೆಂಬುದು ಹುಸಿಯೆ ? ಶಿವಭಕ್ತರಿರ್ದ ದೇಶ ಪಾವನವೆಂಬುದು ಹುಸಿಯೆ ? ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಕಂಡು ಬದುಕಿದೆನು ಕಾಣಾ ಸಿದ್ಧರಾಮಯ್ಯಾ.