ಶೀಲ ಶೀಲವೆಂದು ನುಡಿವುತಿರ್ಪರೆಲ್ಲರು. ಶೀಲದ ಹೊಲಬನಾರೂ ಅರಿಯರಲ್ಲ. ಕೆರೆ ಬಾವಿ ಹಳ್ಳ ಕೊಳ್ಳ ಹೊಳೆಗಳ ನೀರ ಬಳಸದಿರ್ದಡೆ ಶೀಲವೆ ? ಕೊಡಕ್ಕೆ ಪಾವಡವ ಹಾಕಿ ಚಿಲುಮೆಯ ಶೀತಳವ ತಂದಡೆ ಶೀಲವೆ ? ಒಳ್ಳೆ ಭಂಗಿ ಉಳ್ಳೆ ನುಗ್ಗೆಯ ಬಿಟ್ಟಡೆ ಶೀಲವೆ ? ಬೆಳೆದ ಬೆಳೆಸು ಕಾಯಿಹಣ್ಣುಗಳ ಬಿಟ್ಟಡೆ ಶೀಲವೆ ? ಉಪ್ಪು ಎಣ್ಣೆ ತುಪ್ಪ ಹಾಲು ಇಂಗು ಮೆಣಸು ಅಡಿಕೆ ಬೆಲ್ಲಗಳ ಬಿಟ್ಟಡೆ ಶೀಲವೆ ? ಪರಪಾಕವ ಬಿಟ್ಟು ಸ್ವಯಪಾಕದಲ್ಲಿರ್ದಡೆ ಶೀಲವೆ ? ಅಲ್ಲಲ್ಲ. ಭವಿಕಾಣಬಾರದಂತಿರ್ದಡೆ ಶೀಲವೆ ? ಅಲ್ಲಲ್ಲ. ಅದೇನು ಕಾರಣವೆಂದೊಡೆ : ಇಂತಿವೆಲ್ಲವು ಹೊರಗಣ ವ್ಯವಹಾರವು. ಇನ್ನು ಅಂತರಂಗದ ಅರಿಷಡ್ವರ್ಗಂಗಳೆಂಬ ಭವಿಯ ಕಳೆಯಲಿಲ್ಲ. ಮಾಯಾಮೋಹವೆಂಬ ಒಳ್ಳೆ ಭಂಗಿ ಉಳ್ಳೆ ನುಗ್ಗೆಯ ಬಿಡಲಿಲ್ಲ. ಸಂಸಾರವಿಷಯರಸವೆಂಬ ಹಳ್ಳ ಕೊಳ್ಳ ಕೆರೆ ಬಾವಿಗಳ ನೀರ ನೀಗಲಿಲ್ಲ. ಅಷ್ಟಮದಂಗಳೆಂಬ ಉಪ್ಪು ಎಣ್ಣೆ ತುಪ್ಪ ಹಾಲು ಇಂಗು ಮೆಣಸು ಅಡಿಕೆ ಬೆಲ್ಲಗಳ ಬಿಡಲಿಲ್ಲ. ಸಕಲ ಕರಣಂಗಳೆಂಬ ಬೆಳಸು ಫಲಂಗಳ ಬಿಡಲಿಲ್ಲ. ಮನವೆಂಬ ಕೊಡಕ್ಕೆ ಮಂತ್ರವೆಂಬ ಪಾವಡವ ಮುಚ್ಚಿ ಚಿತ್‍ಕೋಣವೆಂಬ ಚಿಲುಮೆಯಲ್ಲಿ ಚಿದಾಮೃತವೆಂಬ ಶೀತಳವ ತಂದು ಚಿನ್ಮಯಲಿಂಗಕ್ಕೆ ಅಭಿಷೇಕವ ಮಾಡಲಿಲ್ಲ. ಇಂತೀ ಅಂತರಂಗದ ಪದಾರ್ಥಂಗಳ ಬಿಟ್ಟು ಮುಕ್ತಿಯ ಪಡೆವೆನೆಂಬ ಯುಕ್ತಿಗೇಡಿಗಳಿಗೆ ಭವಬಂಧನಂಗಳು ಹಿಂಗಲಿಲ್ಲ
ಜನನಮರಣಂಗಳು ಜಾರಲಿಲ್ಲ
ಸಂಸಾರದ ಮಾಯಾಮೋಹವ ನೀಗಲಿಲ್ಲ. ಇಂತಪ್ಪ ಅಜ್ಞಾನಜೀವಿಗಳ ವಿಧಿಯೆಂತಾಯಿತ್ತೆಂದಡೆ : ಹುತ್ತದೊಳಗಣ ಹಾವ ಕೊಲುವೆನೆಂದು ಮೇಲೆ ಹುತ್ತವ ಬಡಿದ ಅರೆಮರುಳನಂತಾಯಿತ್ತು ನೋಡಾ ಅಖಂಡೇಶ್ವರಾ.