ಅಯ್ಯಾ ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಯ್ಯಾ

ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ ನಿಮ್ಮಾಣೆ 
ನಿಮ್ಮ ಪ್ರಮಥರಾಣೆ ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ. ಪ್ರಥಮಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿರ್ದಿರಯ್ಯಾ. ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ. ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ. ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ಸರ್ವಕಾಲಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಷಭನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ
ಹೆಸರಿಟ್ಟು ಕರೆದು ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲಸಂಗಮದೇವಾ
ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ. 4