ವಿಷಯಕ್ಕೆ ಹೋಗು

ಅರಮನೆಯ ಕೂಳನಾದಡೆಯು ತಮ್ಮುದರದ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಮನೆಯ ಕೂಳನಾದಡೆಯು ತಮ್ಮುದರದ ಕುದಿಹಕ್ಕೆ ಲಿಂಗಾರ್ಪಿತವೆಂದೆಡೆ ಅದು ಲಿಂಗಾರ್ಪಿತವಲ್ಲ ಆನರ್ಪಿತ. ಅದೆಂತೆಂದೆಡೆ : ಅರ್ಪಿತಂಚ ಗುರೋರ್ವಾಕ್ಯಂ ಕಿಲ್ಬಿಷಸ್ಯ ಮನೋ[s]ರ್ಪಿತಂ ಅನರ್ಪಿತಸ್ಯ ಭುಂಜಿಯಾನ್ ರೌರವಂ ನರಕಂ ವ್ರಜೇತ್ ಎಂದುದಾಗಿ ತನ್ನ ಒಡಲಕಕ್ಕುಲತೆಗೆ ಆಚಾರವನನುಸರಿಸಿ ಭವಿಶೈವ ದೈವ ತಿಥಿವಾರಂಗಳ ಹೆಸರಿನಲ್ಲಿ ಅಟ್ಟಿ ಕೂಳತಂದು ತಮ್ಮ ಇಷ್ಟಲಿಂಗಕ್ಕೆ ಕೊಟ್ಟು ಹೊಟ್ಟೆಯ ಹೊರೆವ ಆಚಾರಭ್ರಷ್ಟ ಪಂಚಮಹಾಪಾತಕರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ
ಪ್ರಸಾದವಿಲ್ಲವಾಗಿ ಮುಕ್ತಿಯಿಲ್ಲ. ಮುಂದೆ ಅಘೋರ ನರಕವನುಂಬರು. ಇದನರಿದು ನಮ್ಮ ಬಸವಣ್ಣನು ತನುವಿನಲ್ಲಿ ಆಚಾರಸ್ವಾಯತವಾಗಿ. ಮನದಲ್ಲಿ ಅರಿವು ಸಾಹಿತ್ಯವಾಗಿ ಪ್ರಾಣದಲ್ಲಿ ಪ್ರಸಾದ ಸಾಹಿತ್ಯವಾಗಿ ಇಂತೀ ತನು-ಮನ-ಪ್ರಾಣಂಗಳಲ್ಲಿ ಸತ್ಯ ಸದಾಚಾರವಲ್ಲದೆ ಮತ್ತೊಂದನರಿಯದ ಭಕ್ತನು ಭವಿಶೈವ ದೈವ ತಿಥಿ ಮಾಟ ಕೂಟಂಗಳ ಮನದಲ್ಲಿ ನೆನೆಯ. ತನುವಿನಲ್ಲಿ ಬೆರಸ ಭಾವದಲ್ಲಿ ಬಗೆಗೊಳ್ಳ ಏಕಲಿಂಗ ನಿಷ್ಠಾಪರನು ಪಂಚಾಚಾರಯುಕ್ತನು ವೀರಶೈವ ಸಂಪನ್ನ ಸರ್ವಾಂಗಲಿಂಗಿ ಸಂಗನಬಸವಣ್ಣನು ಈ ಅನುವ ಎನಗೆ ಅರುಹಿಸಿ ತೋರಿದ ಕಾರಣ ನಾನು ಬದುಕಿದೆನು ಕಾಣಾ ಕೂಡಲಚೆನ್ನಸಂಗಮದೇವಾ.