ಅರಿವು ಸಾಧ್ಯವಾಯಿತ್ತೆಂದು
ಗುರುಲಿಂಗಜಂಗಮವ ಬಿಡಬಹುದೆ ? ಸಂದು ಸಂಶಯವಳಿದು ಅಖಂಡ ಜ್ಞಾನವಾಯಿತ್ತೆಂದು ಪರಧನ ಪರಸ್ತ್ರೀಯರುಗಳಿಗೆ ಅಳುಪಬಹುದೆ ? 'ಯತ್ರ ಜೀವಃ ತತ್ರ ಶಿವಃ' ಎಂಬ ಅಭಿನ್ನ ಜ್ಞಾನವಾಯಿತ್ತೆಂದು ಶುನಕ ಸೂಕರ ಕುಕ್ಕುಟ ಮಾರ್ಜಾಲಂಗಳ ಕೂಡೆ ಭುಂಜಿಸಬಹುದೆ ? ಭಾವದಲ್ಲಿ ತನ್ನ ನಿಜದ ನೆಲೆಯನರಿತಿಹುದು' ಸುಜ್ಞಾನ ಸತ್ಕ್ರಿಯಾ ಸುನೀತಿ ಮಾರ್ಗದಲ್ಲಿ ವರ್ತಿಸುವುದು. ಹೀಂಗಲ್ಲದೆ ಜ್ಞಾನವಾಯಿತ್ತೆಂದು ತನ್ನ ಮನಕ್ಕೆ ಬಂದಹಾಂಗೆ ಮೀರಿನುಡಿದು ನಡೆದೆನಾದಡೆ ಶ್ವಾನಗರ್ಭದಲ್ಲಿ ಹುಟ್ಟಿಸದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯನು ?