ತನುವ ತೋಂಟವ ಮಾಡಿ ಮನವ ಗುದ್ದಲಿ ಮಾಡಿ ಅಗೆದು ಕಳೆದೆನಯ್ಯಾ ಭ್ರಾಂತಿನ ಬೇರ ಒಡೆದು ಸಂಸಾರದ ಹೆಂಟೆಯ ಬಗಿದು ಬಿತ್ತಿದೆನಯ್ಯಾ ಬ್ರಹ್ಮಬೀಜವ. ಅಖಂಡಮಂಡಲವೆಂಬ ಬಾವಿ
ಪವನವೆ ರಾಟಾಳ ಸುಷುಮ್ನನಾಳದಿಂದ ಉದಕವ ತಿದ್ದಿ ಬಸವಗಳೈವರು ಹಸಗೆಡಿಸಿಹವೆಂದು ಸಮತೆ ಸೈರಣೆಯೆಂಬ ಬೇಲಿಯನಿಕ್ಕಿ
ಆವಾಗಳೂ ಈ ತೋಂಟದಲ್ಲಿ ಜಾಗರವಿದ್ದು ಸಸಿಯ ಸಲಹಿದೆನು ಕಾಣಾ ಗುಹೇಶ್ವರಾ.