ದ್ರವ್ಯ ನೀನು ದ್ರವ್ಯಾರ್ಥ ನೀನು; ಪದ ನೀನು
ಪದಾರ್ಥ ನೀನು. ಸಕಲ ನೀನು ನಿಷ್ಕಲ ನೀನು. ಸಕಲ ನಿಷ್ಕಲಾತ್ಮಕ ಪರಿಪೂರ್ಣ ಶಿವನಲ್ಲದೆ ಅನ್ಯ ಭಿನ್ನಭಾವ ಉಂಟೆ ? ಸಕಲ ನಿಷ್ಕಲ ತತ್ವಂಗಳು; ನಿಮ್ಮೊಳಗೆ ಸಮಾಸವನೆಯ್ದುವೆವೆಂದು ತಮ್ಮ ತಮ್ಮ ಅಂಗದ ಮೇಲೆ ಸರ್ವಪದಾರ್ಥಂಗಳ ಹೆಸರಿಟ್ಟು ಹೊತ್ತುಕೊಂಡೈದಾವೆ ನೋಡಾ ! ಅದೆಂತೆಂದಡೆ: ``ದ್ರವ್ಯಾರ್ಥಂ ಚ ಮಹಾದೇವೋ ದ್ರವ್ಯರೂಪೋ ಮಹೇಶ್ವರಃ ಇತಿ ಮೇ ಭೇದನಂ ನಾಸ್ತಿ ಸರ್ವರೂಪಸ್ಸದಾಶಿವಃ _ ಇಂತೆಂದುದಾಗಿ_ನಾದ ನೀನು
ಬಿಂದು ನೀನು
ಕಳೆ ನೀನು
ಕಳಾತೀತ ನೀನು ಗುಹೇಶ್ವರಾ.